ಖ್ಯಾತ ಸಾಹಿತಿ, ನಾಡೋಜ ಡಾ. ಕಮಲಾ ಹಂಪನ ನಿಧನ

ಮಂಗಳೂರು/ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿದೆ. ಕನ್ನಡದ ಹಿರಿಯ ಸಾಹಿತಿ, ಲೇಖಕಿ ಕಮಲಾ ಹಂಪನ ಇಂದು(ಜೂ.22) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷವಾಗಿತ್ತು.

ಪತಿ, ಹಿರಿಯ ಸಾಹಿತಿ ಡಾ ಹಂ.ಪ.ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಹಾಗೂ ಅಪಾರ ಬಂಧುಮಿತ್ರರು, ಹಿತೈಷಿಗಳನ್ನು ಅಗಲಿರುವ ಡಾ. ಕಮಲಾ ಹಂಪನ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು ಪುತ್ರಿ ಡಾ. ಆರತಿ ಮನೆಯಲ್ಲಿ ವಾಸವಿದ್ದರು. ಕಳೆದ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತವಾಗಿತ್ತು. ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆಮಾಡಲಾಗಿದ್ದು, ಅವರ ದೇಹವನ್ನು ಲೀಲಾವತಿ ಆಸ್ಪತ್ರೆಗೆ ದಾನ ಮಾಡಿದ್ದಾರೆ.

ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ದುಡಿದ ಪ್ರೊ. ಕಮಲಾ ಹಂಪನಾ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ. ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರಿಗೆ ಕರ್ನಾಟಕ ಸರ್ಕಾರ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಲಭಿಸಿದೆ.

LEAVE A REPLY

Please enter your comment!
Please enter your name here