ಮಂಗಳೂರು/ಹಾವೇರಿ: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಹಿಳೆಯರು ಸೇರಿ 13 ಜನ ಮೃತಪಟ್ಟಿದ್ದಾರೆ. ಪರಶುರಾಮ್(45), ಭಾಗ್ಯ(40), ನಾಗೇಶ(50), ವಿಶಾಲಾಕ್ಷಿ(40), ಅರ್ಪಿತಾ(18), ಸುಭದ್ರಾ ಬಾಯಿ(65), ಪುಣ್ಯ(50), ಮಂಜುಳಾಬಾಯಿ, ಚಾಲಕ ಆದರ್ಶ್(23), ಮಾನಸ(24), ರೂಪಾ(40), ಮಂಜುಳಾ(50) ಮೃತರು ಮೃತಪಟ್ಟವರು.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಎಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ. ವಾಹನದಲ್ಲಿದ್ದ ಒಟ್ಟು 15 ಜನರೂ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಊರಿಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಅಂಶಿಕುಮಾರ್ ತಿಳಿಸಿದ್ದಾರೆ.