ಮಂಗಳೂರು/ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಿಎಸ್ ಯಡಿಯೂರಪ್ಪ ಮತ್ತು ಇತರ ಮೂವರು ಆರೋಪಿಗಳಿಗೆ ಜುಲೈ 15ಕ್ಕೆ ವಿಚಾರಣೆಗೆ ಹಾಜರಾಗುವಂತೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಈ ಕುರಿತ ಅರ್ಜಿಯನ್ನು ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ.ರಮೇಶ್ ವಿಚಾರಣೆ ನಡೆಸಿದ್ದು ಸಮನ್ಸ್ ಜಾರಿಗೊಳಿಸಲು ಆದೇಶಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯನ್ನು ಪರಿಗಣಿಸಿದ ನ್ಯಾಯಾಲಯ, ಬಿ.ಎಸ್.ಯಡಿಯೂರಪ್ಪ, ಅವರ ಸಹಚರರಾದ ವೈ.ಎಂ.ಅರುಣ್, ಎಂ.ರುದ್ರೇಶ್ ಮತ್ತು ವೈ.ಮರಿಸ್ವಾಮಿ ಅವರು ಜು.15 ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಆದೇಶಿಸಿದೆ.